ಚೆನ್ನೈ, ಏ. 19 (DaijiworldNews/AA): ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ನಡೆದಿದೆ.

ವಿರುಧುನಗರ ಜಿಲ್ಲೆಯ ಕಟ್ಟನಾರ್ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ಭೀಕರತೆಗೆ ನಾಲ್ಕು ಮಹಡಿ ಸಂಪೂರ್ಣವಾಗಿ ನೆಲಸಮವಾಗಿದೆ.
ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ. ಇನ್ನು ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಪಟಾಕಿ ತಯಾರಿಕೆಗೆ ಬೇಕಾದ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ಸಂಭವಿಸಿದ ಘರ್ಷಣೆಯಿಂದ ಈ ಭೀಕರ ಸ್ಫೋಟ ಸಂಭವಿಸರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸುಮಾರು 5 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ.
ಈ ಕಾರ್ಖಾನೆಯಲ್ಲಿ ಸುಮಾರು 150 ಕಾರ್ಮಿಕರು ಕೆಲಸ ಮಾಡುತ್ತಾರೆ. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಸಾಮಾನ್ಯವಾಗಿ ಭಾನುವಾರ ಈ ಕಾರ್ಖಾನೆಗೆ ರಜೆ ನೀಡಲಾಗುತ್ತಿತ್ತು. ಆದರೆ ವಿಧಾನಸಭಾ ಚುನಾವಣೆಗಾಗಿ ಏಪ್ರಿಲ್ 23 ರಂದು ರಜೆ ನೀಡಬೇಕಾಗಿರುವುದರಿಂದ ಇಂದು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇಂದು ಕೆಲಸಕ್ಕೆ ಹಾಜರಾಗಿರುವ ಕಾರ್ಮಿಕರು ಎಷ್ಟು ಎಂಬ ಮಾಹಿತಿ ತಿಳಿದುಬಂದಿಲ್ಲ.
ನಿರ್ಲಕ್ಷ್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಕಾರ್ಖಾನೆಯ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಕೂಡಲೇ ಕಾರ್ಖಾನೆಯ ಮಾಲೀಕರು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.