ಮೈಸೂರು, ಮೇ. 02 (DaijiworldNews/AA): ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದು, ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬೆಂಬಲಿಗರು ದೆಹಲಿಯಲ್ಲಿ ಬೀಡುಬಿಟ್ಟು ಅಧಿಕಾರಕ್ಕಾಗಿ ಹಂಬಲಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆಯ ನೆರವಿಗೆ ಧಾವಿಸುತ್ತಿಲ್ಲ" ಎಂದು ದೂರಿದರು.
"ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ವ್ಯಾಪಕ ಭ್ರಷ್ಟಾಚಾರದಿಂದಾಗಿ ಅಧಿಕಾರಿಗಳ ಮೇಲೆ ಸರ್ಕಾರದ ನಿಯಂತ್ರಣ ಇಲ್ಲದಂತಾಗಿದೆ ಎಂದರು.
ಇನ್ನು "ಇದೇ ೯ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷದ ಸಾರ್ವಜನಿಕ ಜೀವನದ 'ಅಭಿಮಾನೋತ್ಸವ' ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.