ಬೆಂಗಳೂರು, ಮೇ. 02 (DaijiworldNews/AA): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನ ಅನರ್ಹಗೊಳಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಈ ಮೂಲಕ ಧಾರವಾಡ ವಿಧಾನಸಭಾ ಕ್ಷೇತ್ರ ತೆರವಾಗಿರುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಏ.15ರಿಂದಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಧಾರವಾಡದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.13ರಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ಪ್ರಕಟಿಸಿ, ಏ.15ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ ಮೇ 2 ರಂದು ಶಾಸಕ ಸ್ಥಾನ ರದ್ದಾಗಿರುವ ಬಗ್ಗೆ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.