ಬೆಂಗಳೂರು, ಮೇ. 04 (DaijiworldNews/AK): ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಧೂಳೀಪಟವಾದಂತೆ ರಾಜ್ಯದಲ್ಲೂ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ನೆಲಕಚ್ಚಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಯಾವುದೇ ಭವಿಷ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಪಂಚರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದೆರಡು ಸ್ಥಾನಗಳನ್ನೂ ಗೆಲ್ಲಲೂ ಆಗದ ಕಾಂಗ್ರೆಸ್ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದರು.
ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆಯ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ. ಇದೊಂದು ಐತಿಹಾಸಿಕ ಫಲಿತಾಂಶ. ಇದಕ್ಕಾಗಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ನಿರಂತರ ಮಾರ್ಗದರ್ಶನ ನೀಡಿದ್ದಾರೆ ಮತ್ತು ಪಕ್ಷವನ್ನು ಸೂಕ್ತವಾಗಿ ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.
ಅಭಿವೃದ್ಧಿ ಮತ್ತು ವಿಕಸಿತ ಭಾರತ ನಿರ್ಮಾಣ ಮಾಡಬೇಕು ಎಂಬ ಎನ್ಡಿಎ ಬದ್ಧತೆಗೆ ಮತದಾರರು ಆಶೀರ್ವಾದ ಮಾಡಿದ್ದಾರೆ ಎಂದು ನುಡಿದರು. ಜನರಿಗೆ ಕೇವಲ ಉಚಿತ ಘೋಷಣೆಗಳನ್ನು ಮಾಡಿ ದೀರ್ಘಕಾಲ ಮರುಳು ಮಾಡಲು ಸಾಧ್ಯವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಮೌಲ್ಯಾಧಾರಿತ ಅಭಿವೃದ್ಧಿ, ಸ್ಥಿರತೆ ಮತ್ತು ಪಾರದರ್ಶಕತೆಯ ಸರ್ಕಾರವನ್ನು ಜನರು ಬಯಸಿದ್ದಾರೆ. ಆದ್ದರಿಂದಲೇ ಬಿಜೆಪಿಗೆ ಗೆಲುವು ತಂದುಕೊಟ್ಟಿದ್ದಾರೆ ಎಂದರು.
ನಾವು ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು. ಈ ಗೆಲುವಿಗಾಗಿ ಅಸಂಖ್ಯಾತ ಕಾರ್ಯಕರ್ತರು ಬದ್ಧತೆಯಿಂದ ಹಗಲಿರುಳು ಶ್ರಮಿಸಿದ್ದಾರೆ. ಅವರೇ ಒಂದು ರೀತಿ ಪಕ್ಷದ ಬೆನ್ನೆಲುಬು ಎಂದು ಪ್ರಶಂಸಿಸಿದರು.