ಹಾವೇರಿ, ಮೇ. 05 (DaijiworldNews/TA): ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ‘ಪಲ್ಲಕ್ಕಿ’ ಬಸ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಬಸ್ಸಿನಲ್ಲಿದ್ದ ಹದಿನೇಳು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಸಮೀಪ ಕರ್ನಾಟಕ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗದಗದತ್ತ ಪ್ರಯಾಣಿಸುತ್ತಿದ್ದ ಬಸ್ ಚಲಿಸುತ್ತಿರುವಾಗಲೇ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ಪಕ್ಕೀರಪ್ಪ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಅವರ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ರಾಣೆಬೆನ್ನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.