ಗುವಾಹಟಿ, ಮೇ. 06 (DaijiworldNews/AK): ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಪಾಲರು ಶರ್ಮಾ ಹಾಗೂ ಸಂಪುಟ ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೂಚಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೇ 12ರಂದು ನಡೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಶರ್ಮಾ ಅವರೇ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಕುರಿತು ಶರ್ಮಾ ಮಾತನಾಡಿ, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ದಿನಾಂಕವನ್ನು ಕೇಂದ್ರ ವೀಕ್ಷಕ ಜೆಪಿ ನಡ್ಡಾ ನಿರ್ಧರಿಸಲಿದ್ದಾರೆ. ಈ ಸಭೆಯಲ್ಲಿ ಮುಂದಿನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಅವರು ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.