ಬೆಳಗಾವಿ, ಮೇ. 11 (DaijiworldNews/AA): ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದೆ.

ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯಪ್ರಜ್ಞೆಯಿಂದಾಗಿ ಬೆಂಕಿ ಪಕ್ಕದ ಕಾರ್ಖಾನೆಗಳಿಗೆ ಹರಡುವುದು ತಪ್ಪಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.