ಮಂಗಳೂರು/ಬೆಂಗಳೂರು, ಮೇ. 12 (DaijiworldNews/AK): ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಮೇ 13 ರ ಬುಧವಾರದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 12 ರ ಸುಮಾರಿಗೆ ತಮಿಳುನಾಡು ಕರಾವಳಿಯ ಬಳಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದು ಹವಾಮಾನದಲ್ಲಿ ಬದಲಾವಣೆಗೆ ಕಾರಣವಾಗಬಹುದು.

ಮೇ 13 ರಿಂದ ಕರಾವಳಿ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಹಲವಾರು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಹಿಂದೂ ಮಹಾಸಾಗರ ಮತ್ತು ಅರಬ್ಬಿ ಸಮುದ್ರದ ಮೇಲೆ ನೈರುತ್ಯ ಮಾನ್ಸೂನ್ ಮಾರುತಗಳ ಚಲನೆಯು ಮೇ 15 ರಿಂದ ತೀವ್ರಗೊಳ್ಳುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಕರಾವಳಿಯಲ್ಲಿ ಬಲವಾದ ಪೂರ್ವ ಮಾನ್ಸೂನ್ ಮಳೆಗೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಅನುಕೂಲಕರ ಪರಿಸ್ಥಿತಿಗಳು ರೂಪುಗೊಳ್ಳುತ್ತಿದ್ದು, ಈ ವರ್ಷ ಕರಾವಳಿ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ಸಾಮಾನ್ಯಕ್ಕಿಂತ ಸ್ವಲ್ಪ ಮುಂಚಿತವಾಗಿ ಆಗಮಿಸುವ ಸಾಧ್ಯತೆ ಇದೆ ಎಂದು ಸೂಚಿಸುತ್ತದೆ.
ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೀನುಗಾರರು ಮತ್ತು ಕರಾವಳಿ ತೀರದ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಮೇ 11 ರಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಕಳಸ ಮತ್ತು ಕೊಪ್ಪ ಹಾಗೂ ಹಾವೇರಿಯ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಆ ಪ್ರದೇಶಗಳಲ್ಲಿ ಬಿಸಿಲ ತಾಪದಿಂದ ಮುಕ್ತ ಸಿಕ್ಕಿದೆ.