ನವದೆಹಲಿ, ಮೇ. 14 (DaijiworldNews/AK): ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ.

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್ಐಆರ್ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳಿರುವುದರಿಂದ ಎಸ್ಐಆರ್ ಪ್ರಕ್ರಿಯೆಯನ್ನು ಮುಂದೂಡಿದೆ.
ಜನಗಣತಿಯ ಎರಡನೇ ಹಂತದ ಪ್ರಗತಿ ಮತ್ತು ಸ್ಥಳೀಯ ಲಾಜಿಸ್ಟಿಕ್ ಪರಿಸ್ಥಿತಿಗಳನ್ನು ಪರಿಗಣಿಸಿದ ನಂತರ ಈ ಪ್ರದೇಶಗಳಿಗೆ ಪ್ರತ್ಯೇಕ ವೇಳಾಪಟ್ಟಿಯನ್ನು ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಹಂತ 3 ರ ಪ್ರಾರಂಭದ ಕುರಿತು ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಅರ್ಹ ನಾಗರಿಕರು ಮಾತ್ರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವ ಮೂಲಕ ನಿಖರವಾದ ಮತದಾರರ ಪಟ್ಟಿಯನ್ನು ನಿರ್ವಹಿಸುವುದು ಮತ್ತು ಅನರ್ಹ ನಮೂದುಗಳನ್ನು ತಡೆಯುವುದು ಈ ಪ್ರಕ್ರಿಯೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಈ ಹಂತದಲ್ಲಿ ಸುಮಾರು 36.73 ಕೋಟಿ ಮತದಾರರನ್ನು ತಲುಪುವ ಗುರಿಯನ್ನು ಹೊಂದಲಾಗಿದೆ. ಮರಣ ಹೊಂದಿದವರು, ಶಾಶ್ವತವಾಗಿ ವಲಸೆ ಹೋದವರು ಮತ್ತು ಒಂದಕ್ಕಿಂತ ಹೆಚ್ಚು ಕಡೆ ನಕಲಿ ಹೆಸರನ್ನು ಹೊಂದಿರುವವರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.
ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಅಕ್ಟೋಬರ್ 1 ಅರ್ಹತಾ ದಿನವನ್ನಾಗಿ (Qualifying Date – ಒಬ್ಬ ನಾಗರಿಕನು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಲು ಕನಿಷ್ಠ 18 ವರ್ಷ ತುಂಬಿರಬೇಕಾದ ನಿಗದಿತ ಕಟ್-ಆಫ್ ದಿನಾಂಕ) ಪರಿಗಣಿಸಲಾಗಿದೆ.
ಕರ್ನಾಟಕಕ್ಕೆ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29ರವರೆಗೆ ನಮೂನೆಗಳ ಸಿದ್ಧತೆ, ತರಬೇತಿ ಮತ್ತು ಮುದ್ರಣ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ BLOಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆಗಸ್ಟ್ 5ರಿಂದ ಸೆಪ್ಟೆಂಬರ್ 3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಇವುಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 3ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.