ಬೆಂಗಳೂರು, ಮೇ. 14 (DaijiworldNews/AA): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ. 'ಬೆಲೆ ಏರಿಕೆಯು ಜನಸಾಮಾನ್ಯರ ಬದುಕನ್ನ ಅಸ್ತವ್ಯಸ್ತಗೊಳಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು. ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ" ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ಪಿಜಿ ದರ ಈಗ 1,000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ" ಎಂದು ಹೇಳಿದರು.
ವೈದ್ಯಕೀಯ ಕೋರ್ಸ್ಗ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, "ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ" ಎಂದರು.