ನವದೆಹಲಿ, ಜು. 01 (DaijiworldNews/AA): ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಹೇಳಲಾಗಿದೆ.

ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಪುನರ್ವಿಂಗಡನೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸುವ ಸಾಧ್ಯತೆ ಇದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಎರಡೂ ಮಸೂದೆಗಳು ಏಪ್ರಿಲ್ನಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ದೊರೆಯದ ಕಾರಣ ಅಂಗೀಕಾರವಾಗಿರಲಿಲ್ಲ. ಈಗ ಕೆಲವು ವಿರೋಧ ಪಕ್ಷಗಳ ವಿಷಯಾಧಾರಿತ ಬೆಂಬಲದ ನಿರೀಕ್ಷೆಯೊಂದಿಗೆ ಸರ್ಕಾರ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿವೆ.