ನವದೆಹಲಿ, ಜು. 04 (DaijiworldNews/AK):ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಿಂದ ಆರಂಭವಾಗಿ ಆಗಸ್ಟ್ 13ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆ ಬಳಿಕ ಈ ಕುರಿತು ಅಧಿಕೃತ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸುಮಾರು 4 ವಾರಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ 19 ಕಲಾಪಗಳು ನಡೆಯುವ ಸಾಧ್ಯತೆ ಇದ್ದು, ಹಲವು ಮಹತ್ವದ ಮಸೂದೆಗಳು ಹಾಗೂ ರಾಷ್ಟ್ರೀಯ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ಈ ಬಾರಿಯ ಅಧಿವೇಶನ ರಾಜಕೀಯವಾಗಿ ತೀವ್ರ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಜಾರಿಗೆ ಸಂಬಂಧಿಸಿದ ಸಂವಿಧಾನ 130ನೇ ತಿದ್ದುಪಡಿ ಮಸೂದೆ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳನ್ನ ಕೇಂದ್ರ ಸರ್ಕಾರ ಮತ್ತೊಮ್ಮೆ ಮಂಡಿಸಲು ಸಿದ್ಧತೆ ನಡೆಸಿದೆ.