ನವದೆಹಲಿ,ಜು.16 (DaijiworldNews/AK): ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ವೈದ್ಯರ ಸಲಹೆ ಮೇರೆಗೆ ಅಗತ್ಯವಿರುವ ವೈದ್ಯಕೀಯ ನೆರವು ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.

ಸೋನಮ್ ವಾಂಗ್ಚುಕ್ ಅವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತ್ತು.
ಈ ವೇಳೆ ಪ್ರತಿಯೊಂದು ಜೀವವೂ ಅಮೂಲ್ಯ. ಸರ್ಕಾರಿ ವೈದ್ಯರು ನಿಯಮಿತವಾಗಿ ವೈದ್ಯಕೀಯವಾಗಿ ಪರೀಕ್ಷಿಸಬೇಕೆಂದು ನಾವು ಬಯಸುತ್ತೇವೆ. ಯಾವುದೇ ಔಷಧಿ ಅಗತ್ಯವಿದ್ದರೆ ಮಧ್ಯಪ್ರವೇಶಿಸಿ ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು.
ಈ ಬೆನ್ನಲ್ಲೇ, ವೈದ್ಯರ ಸಲಹೆ ಮೇರೆಗೆ ಅಗತ್ಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾಂಗ್ಚುಕ್ ಅವರ ಆರೋಗ್ಯವನ್ನು ಈಗಾಗಲೇ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ತಜ್ಞರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅವರ ಸ್ಥಿತಿಯ ಆಧಾರದ ಮೇಲೆ ವೈದ್ಯರು ಸೂಚಿಸಿದಂತೆ ಅಗತ್ಯವಿರುವ ಯಾವುದೇ ಸಹಾಯವನ್ನೂ ಸರ್ಕಾರ ಮಾಡಲಿದೆ ಎಂದು ಅವರು ಪೀಠಕ್ಕೆ ಭರವಸೆ ನೀಡಿದರು.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ರಾಜೀನಾಮೆಗೆ ಆಗ್ರಹಿಸಿ ಕಳೆದ 19 ದಿನಗಳಿಂದ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್ ಅವರ ಆರೋಗ್ಯ ವೇಗವಾಗಿ ಕುಸಿಯುತ್ತಿದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಅವರು ಇದುವರೆಗೆ ಸುಮಾರು 9 ಕೆ.ಜಿ ತೂಕ ಕಳೆದುಕೊಂಡಿದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆಯಿದೆ ಎಂದು ಅರ್ಜಿದಾರರು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡುವಂತೆ ಕೋರಲಾಗಿದ್ದು, ವಾಂಗ್ಚುಕ್ ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಅಗತ್ಯ ಪರಿಸ್ಥಿತಿ ನಿರ್ಮಾಣವಾದರೆ ವೈದ್ಯರ ಸಲಹೆಯಂತೆ ಬಲವಂತವಾಗಿ ಆಹಾರ ನೀಡಲು ಅವಕಾಶ ಕಲ್ಪಿಸಬೇಕೆಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.