ದಾವಣಗೆರೆ, ಆ. 03 (DaijiworldNews/TA): ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯ ಪರಿಣಾಮ ತುಂಗಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಸುಮಾರು 92 ಸಾವಿರ ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮ ದಾವಣಗೆರೆ ಜಿಲ್ಲೆಯ ಹರಿಹರ ಸಮೀಪದ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದ್ದು, ನದಿ ಉಕ್ಕಿ ಹರಿಯುತ್ತಿದೆ.

ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಿದ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿರುವ 20ಕ್ಕೂ ಹೆಚ್ಚು ತಾತ್ಕಾಲಿಕ ಅಂಗಡಿಗಳು ಮುಳುಗಡೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಗಡಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ತುಂಗಭದ್ರಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ಪಾತ್ರಕ್ಕೆ ಭಕ್ತರು ಹಾಗೂ ಸಾರ್ವಜನಿಕರು ತೆರಳದಂತೆ ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ಅಲ್ಲದೆ, ನದಿ ತೀರದಲ್ಲಿ ಅನಗತ್ಯವಾಗಿ ಓಡಾಟ ನಡೆಸದಂತೆ ಸೂಚಿಸಲಾಗಿದೆ.
ಗಮನಾರ್ಹವಾಗಿ, ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ತುಂಗಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ನದಿ ತೀರದ ನಿವಾಸಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.