ಬೆಂಗಳೂರು, ಆ. 03 (DaijiworldNews/AK): ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿಗಳ ಹೆಸರನ್ನೂ ಎಐಸಿಸಿ ಅಂತಿಮಗೊಳಿಸಿದೆ. ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ನೇಮಕವಾಗಿದ್ದರೆ, ಡೆಪ್ಯೂಟಿ ಸ್ಪೀಕರ್ ಆಗಿ ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರ ಸ್ವೀಕರಿಸಲಿದ್ದಾರೆ. ಉಳಿದಂತೆ ವಿಧಾನಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಿಸಲಾಗಿದೆ.
ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅದಾಗಲೇ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡೆಪ್ಯೂಟಿ ಸ್ಪೀಕರ್ ಆಗಿದ್ದ ರುದ್ರಪ್ಪ ಲಮಾಣಿ ಕೂಡ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ, ತಮ್ಮ ಹಾಲಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿರೋದಾಗಿ ತಿಳಿಸಿದ್ದಾರೆ.