ಬೆಂಗಳೂರು, ಆ. 21 (DaijiworldNews/TA): ಸಚಿವ ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಈಗಾಗಲೇ ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನಿರ್ವಹಿಸುತ್ತಿರುವ ನಾಗೇಂದ್ರ ಅವರಿಗೆ ಇದೀಗ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ’ದ ಹೊಣೆ ನೀಡಲಾಗಿದೆ.

ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರು ಕೇಳಿದ್ದ ಪ್ರಶ್ನೆಗೆ ಸಚಿವ ನಾಗೇಂದ್ರ ಲಿಖಿತ ಉತ್ತರ ನೀಡಿದ್ದು, ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 2025ರಲ್ಲಿ ರಚನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯಕ್ಕೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರೇ ಮುಖ್ಯಸ್ಥರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ. ಈ ಸಚಿವಾಲಯದ ಅಧೀನದಲ್ಲೇ ಪ್ರಮುಖವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸಲಿದೆ. ಸಚಿವಾಲಯದ ಸುಗಮ ಕಾರ್ಯಾಚರಣೆಗಾಗಿ ಸರ್ಕಾರ ಒಟ್ಟು 16 ಹುದ್ದೆಗಳನ್ನು ಮೀಸಲಿಟ್ಟಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪ್ರತಿಭಟನೆ ನಡುವೆಯೇ ಹೆಚ್ಚಿದ ಜವಾಬ್ದಾರಿ : ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ತೀವ್ರ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈಗ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜತೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಜವಾಬ್ದಾರಿಯನ್ನೂ ನಾಗೇಂದ್ರ ನಿರ್ವಹಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಯೋಜನೆಗಳು ಹಾಗೂ ಅವುಗಳ ಅನುಷ್ಠಾನದಲ್ಲಿ ಈ ಸಚಿವಾಲಯ ಪ್ರಮುಖ ಪಾತ್ರ ವಹಿಸಲಿದೆ.