ಬೆಂಗಳೂರು, ಆ. 25 (DaijiworldNews/TA): ಮಾಜಿ ಸಂಸದ ಪ್ರತಾಪ್ ಸಿಂಹ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಪ್ರಕರಣದ ವಿಚಾರಣೆ ಇಂದು ನಡೆದಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾ. ಸಂದೀಪ್ ಪಾಟೀಲ್ ಅವರ ಪೀಠವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸುವ ಆದೇಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಲಾಗಿದೆ.
ಏನಿದು ಪ್ರಕರಣ? : ಕೆಲ ತಿಂಗಳ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು ಎನ್ನಲಾಗಿದೆ.
ಇದನ್ನು ಆಧರಿಸಿ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂದಿನ ವಿಚಾರಣೆಗೆ ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ವಕೀಲರು ಗೈರಾಗಿದ್ದರಿಂದ ನ್ಯಾಯಾಲಯವು NBW ಜಾರಿಗೊಳಿಸಿದೆ. ಸೆಪ್ಟೆಂಬರ್ 7ರಂದು ನಡೆಯಲಿರುವ ಮುಂದಿನ ವಿಚಾರಣೆಯತ್ತ ಇದೀಗ ಪ್ರಕರಣದ ಗಮನ ನೆಟ್ಟಿದೆ.