ಬೆಂಗಳೂರು, ಆ. 25 (DaijiworldNews/AK): ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಈ ಮೂಲಕ ಕಾಂಗ್ರೆಸ್ ಸರಕಾರವು ಭ್ರಷ್ಟರನ್ನು ರಕ್ಷಿಸಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಿಸಿದ್ದಾರೆ.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿ ಪರಿಷತ್ತಿನ ಬಂಧಿತ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು. ಅವರ ಮೇಲಿನ ದೌರ್ಜನ್ಯ ಸಂಬಂಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕೆಪಿಎಸ್ಸಿ ಕರ್ಮಕಾಂಡದ ಕುರಿತಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರ ಮೇಲೆ ಅಮಾನುಷವಾಗಿ ಕರ್ನಾಟಕದ ಸರಕಾರ ನಡೆದುಕೊಂಡಿದೆ ಎಂದು ಟೀಕಿಸಿದರು. ಅವರು ಅನ್ಯಾಯದ ವಿರುದ್ಧ, ಭ್ರಷ್ಟಾಚಾರದ ವಿರುದ್ಧ ಹಾಗೂ ನ್ಯಾಯಯುತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ತಿಳಿಸಿದರು.
ಒಬ್ಬ ಐಎಎಸ್ ಅಧಿಕಾರಿ ಜ್ಞಾನೇಂದ್ರ, ಇ.ಡಿ. ತನಿಖೆಗೆ ಸಿಗದೇ ನಾಪತ್ತೆಯಾಗಿದ್ದಾರೆ. ಬ್ರಹ್ಮಾಂಡದ ಎಲ್ಲ ವಿಷಯಗಳ ಬಗ್ಗೆ ಮಾತನಾಡುವ ಗೃಹ ಸಚಿವರು ಜ್ಞಾನೇಂದ್ರ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದರು.