ನವದೆಹಲಿ, ಆ. 26 (DaijiworldNews/AA): ಭೀಕರ ಪ್ರವಾಹದಿಂದಾಗಿ ತತ್ತರಿಸಿರುವ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ. ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆ ಗಟ್ಟಿಯಾಗಿ ನಿಲ್ಲಲಿದ್ದು, ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಸಿದ್ಧವಾಗಿದೆಎಂದು ಭರವಸೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ನೇಪಾಳದ ಪ್ರಧಾನಿ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಪ್ರವಾಹದಿಂದಾಗಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದೇನೆ. ಈ ಕಷ್ಟದ ಸಮಯದಲ್ಲಿ ಭಾರತದ ಜನತೆ ನೇಪಾಳದ ತಮ್ಮ ಸಹೋದರ ಸಹೋದರಿಯರ ಪರವಾಗಿ ಗಟ್ಟಿಯಾಗಿ ನಿಲ್ಲುತ್ತಾರೆ. ನೇಪಾಳಕ್ಕೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ನೀಡಲು ಭಾರತ ಸಿದ್ಧವಾಗಿದೆ. ನಮ್ಮ ತಂಡಗಳು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ" ಎಂದಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಲು ಭಾರತ ನೇಪಾಳದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಭಾರತೀಯ ವಾಯುಪಡೆಯ ವಿಮಾನಗಳ ಮೂಲಕ ಔಷಧಿ, ಆಹಾರ ಹಾಗೂ ಅಗತ್ಯ ವಸ್ತುಗಳನ್ನು ಕಳುಹಿಸಲು ತಯಾರಿ ನಡೆಯುತ್ತಿದೆ.
ನೇಪಾಳದಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಹಾಗೂ 400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ 291 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ. ಈ ಪೈಕಿ ಭಾರತದ 105, ಮಲೇಷ್ಯಾದ 17, ಯುಕೆಯ 12, ದಕ್ಷಿಣ ಆಫ್ರಿಕಾದ 4, ಅಮೆರಿಕದ 3, ಆಸ್ಟ್ರೇಲಿಯಾದ 1, ನೆದರ್ಲೆಂಡ್ನ 1 ಪ್ರಜೆ ಸೇರಿದ್ದಾರೆ. ಇನ್ನು ಉಳಿದ 13 ಪ್ರವಾಸಿಗರ ಪೌರತ್ವ ಮತ್ತು ವಿವರಗಳನ್ನು ಇನ್ನೂ ದೃಢೀಕರಿಸಬೇಕಾಗಿದೆ.