ಬೆಂಗಳೂರು, ಆ. 26 (DaijiworldNews/TA): ಕಸ್ತೂರಿ ರಂಗನ್ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರಕಾರವು ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿ ಬಗ್ಗೆ ಆತಂಕ ಪಡಬೇಕಾಗಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರಕಾರ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೆ ಪಶ್ಚಿಮಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಅತ್ಯಂತ ಖಂಡನೀಯ ಎಂದು ಟೀಕಿಸಿದರು.