ಬೆಂಗಳೂರು, ಆ. 27 (DaijiworldNews/TA): ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳು ಬರಪೀಡಿತ ಎಂದು ಘೋಷಿಸಲು ಅರ್ಹವಾಗಿವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ನೆರವು ನಿರೀಕ್ಷಿಸಲಾಗುತ್ತಿದೆ. 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿರುವ ಎನ್ಡಿಆರ್ಎಫ್ ಹಣ ಇನ್ನೂ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರದಿಂದ ಒಟ್ಟು ರೂ. 1,239 ಕೋಟಿ ಬರಬೇಕಿದ್ದು, ಇದರಲ್ಲಿ ಮೊದಲ ಕಂತಾಗಿ ರೂ. 450 ಕೋಟಿ ಬಿಡುಗಡೆ ಮಾಡಬೇಕಿದೆ ಎಂದು ಹೇಳಿದರು.
ಬರ ಪರಿಸ್ಥಿತಿ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರವಾಗಿ ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಪರಮೇಶ್ವರ್ ತಿಳಿಸಿದರು. ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಯಲಹಂಕ, ನೆಲಮಂಗಲ, ಹೊಸಕೋಟೆ, ಕೋಲಾರ, ಮಾಲೂರು, ಮುಳಬಾಗಿಲು, ರಾಮನಗರ, ಮಾಗಡಿ, ಬಂಗಾರಪೇಟೆ, ಶ್ರೀನಿವಾಸಪುರ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಚೇಳೂರು, ಮಂಚೇನಹಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 101 ತಾಲೂಕುಗಳು ಬರಪೀಡಿತ ಎಂದು ಘೋಷಿಸಲು ಅರ್ಹವಾಗಿವೆ ಎಂದು ಸರ್ಕಾರದ ಮೌಲ್ಯಮಾಪನದಲ್ಲಿ ಕಂಡುಬಂದಿದೆ.
ತುಮಕೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಶಿರಾ, ಕುಣಿಗಲ್, ಮಧುಗಿರಿ, ಪಾವಗಡ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಚನ್ನಗಿರಿ, ಹೊನ್ನಾಳಿ, ನ್ಯಾಮತಿ, ಬಾಗಲಕೋಟೆ, ಬೀಳಗಿ, ಜಮಖಂಡಿ, ಗುಳೇದಗುಡ್ಡ, ಇಳಕಲ್, ವಿಜಯಪುರ, ನಿಡಗುಂದಿ, ಕೊಲ್ಹಾರ, ಗಜೇಂದ್ರಗಢ, ಅರಕಲಗೂಡು, ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅಜ್ಜಂಪುರ, ಶಹಾಪುರ, ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಲಿಂಗಸುಗೂರು, ಪಾಂಡವಪುರ, ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ತರೀಕೆರೆ, ಮುಂಡಗೋಡು, ಯಲ್ಲಾಪುರ ಸೇರಿದಂತೆ ಹಲವು ತಾಲೂಕುಗಳು ಈ ಪಟ್ಟಿಯಲ್ಲಿವೆ.
ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಗುಳೆ ಹೋಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಹೇಳಿದರು. ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಅಧಿಕಾರಿಗಳನ್ನು ನಿಯೋಜಿಸಿ, ಗುಳೆ ಹೋಗುತ್ತಿರುವ ಜನರನ್ನು ತಡೆದು ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಉದ್ಯೋಗ ಸೃಷ್ಟಿಗಾಗಿ ವಿಬಿಜಿ ರಾಮ್ ಜಿ ಯೋಜನೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ವಿಧಾನಸಭಾ ಕ್ಷೇತ್ರಗಳಿಗೆ ರೂ. 189 ಕೋಟಿ ಅನುದಾನ ನೀಡಲಾಗಿದೆ. ನೀರಿನ ಲಭ್ಯತೆ ಇರುವ ಪ್ರದೇಶಗಳಲ್ಲಿ ಬಿತ್ತನೆ ಮಾಡಲು ಮೇವು ಬೀಜ ಪೂರೈಕೆ ಮಾಡಲಾಗಿದ್ದು, ಬರ ನಿರ್ವಹಣೆಗಾಗಿ ಒಟ್ಟು ರೂ. 635 ಕೋಟಿ ಮೀಸಲಿಡಲಾಗಿದೆ ಎಂದು ಡಾ. ಪರಮೇಶ್ವರ್ ಮಾಹಿತಿ ನೀಡಿದರು.