ಬೆಂಗಳೂರು, ಆ. 27 (DaijiworldNews/TA): ನೇಪಾಳ ಹಾಗೂ ಟಿಬೆಟ್ ಗಡಿಭಾಗದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಹಲವು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ತೊಂದರೆಗೆ ಒಳಗಾದವರು, ಅವರ ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು ಅಗತ್ಯ ಮಾಹಿತಿಯನ್ನು ಸರ್ಕಾರದ ಗೂಗಲ್ ಫಾರ್ಮ್ನಲ್ಲಿ ಸಲ್ಲಿಸುವಂತೆ ಮುಖ್ಯಮಂತ್ರಿ ಕಚೇರಿ ಮನವಿ ಮಾಡಿದೆ.

ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ವಿದೇಶಾಂಗ ಇಲಾಖೆ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್ನ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಾಚರಣೆ, ಸ್ಥಳಾಂತರ ಹಾಗೂ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ. ಸಹಾಯಕ್ಕಾಗಿ 1070 / 080-22253707 ಹೆಲ್ಪ್ಲೈನ್ ಸಂಖ್ಯೆಗೆ ಸಂಪರ್ಕಿಸುವಂತೆ ಸೂಚಿಸಲಾಗಿದೆ.
ನೇಪಾಳ ಪ್ರವಾಹದಲ್ಲಿ ಕೆಲವರು ನಾಪತ್ತೆಯಾಗಿದ್ದು, ಇನ್ನೂ ಕೆಲವರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ಕನ್ನಡಿಗರನ್ನು ಆದಷ್ಟು ಬೇಗ ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೇಪಾಳ ಪ್ರವಾಹದಲ್ಲಿ ಕನ್ನಡಿಗರು ಮೃತಪಟ್ಟಿರುವ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪರಿಸ್ಥಿತಿಯ ಮೇಲ್ವಿಚಾರಣೆಗಾಗಿ ಹಿರಿಯ ಅಧಿಕಾರಿಯೊಬ್ಬರನ್ನು ಕಠ್ಮಂಡುವಿಗೆ ಕಳುಹಿಸಲಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಚೀನಾ ರಾಯಭಾರಿಯನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದ್ದು, ಅಗತ್ಯವಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವರನ್ನೂ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ನಡುವೆ ನೇಪಾಳ ಪ್ರವಾಸಕ್ಕೆ ತೆರಳಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ 6 ಕುಟುಂಬಗಳ 15 ಮಂದಿ ಸುರಕ್ಷಿತವಾಗಿರುವ ಮಾಹಿತಿ ಲಭ್ಯವಾಗಿದೆ. ಅವರು ಪೋಖರಾದಿಂದ ಸುಮಾರು 50 ಕಿ.ಮೀ. ದೂರದಲ್ಲಿದ್ದು, ನೇಪಾಳದ ಸೋನೌಲಿ ಗಡಿ ಮೂಲಕ ಕರ್ನಾಟಕಕ್ಕೆ ವಾಪಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.