ಮಂಡ್ಯ, ಸೆ.13 (DaijiworldNews/AA): ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7,000 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು, "ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಾರಿಗೆ ಇಲಾಖೆಯ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಗೆ ಒಟ್ಟು 7,000 ಕೋಟಿ ರೂ. ಅನುದಾನವನ್ನು ನೀಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಇದಿಷ್ಟೇ ಅಲ್ಲದೇ, 1,000 ಬಸ್ ಗಳನ್ನು ಖರೀದಿ ಮಾಡಲು ಹಸಿರು ನಿಶಾನೆ ತೋರಿದ್ದು, ರಾಜ್ಯದ ಬಸ್ ನಿಲ್ದಾಣಗಳ ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದಿಂದ 2,000 ಕೋಟಿ ರೂ. ಪಡೆಯಲೂ ಸಮ್ಮತಿ ಸೂಚಿಸಿರುವುದು ಸಂತಸದ ವಿಚಾರವಾಗಿದೆ" ಎಂದರು.
"ಸಿದ್ದರಾಮಯ್ಯ ಅವರು 2023ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ತಕ್ಷಣ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು ಮತ್ತು ಅದರ ಶ್ರೇಯಸ್ಸು ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ. ಈಗಿನ ಮುಖ್ಯಮಂತ್ರಿ ಶಿವಕುಮಾರ್ ಅವರು ಯೋಜನೆಗಳನ್ನು ಮುಂದುವರಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡುವ ಮತ್ತೊಂದು ಯೋಜನೆಯನ್ನು ಪ್ರಕಟಿಸಿ ಜನಮಾನಸದಲ್ಲಿ ಉಳಿಯುವಂತಹ ಕೆಲಸ ಮಾಡುತ್ತಿದ್ದಾರೆ" ಎಂದು ತಿಳಿಸಿದರು.
"ರಾಜ್ಯದಲ್ಲಿ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಇದಕ್ಕಾಗಿ ಸಾರಿಗೆ ಸಂಸ್ಥೆಗಳಿಗೆ ವಾರ್ಷಿಕ ಸುಮಾರು 350 ಕೋಟಿ ರೂ. ವೆಚ್ಚವಾಗುತ್ತದೆ. ಇದು ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗುತ್ತದೆ ಎಂಬುದನ್ನು ಮನಗಂಡಿರುವ ಮುಖ್ಯಮಂತ್ರಿಗಳು ಈ ಹಣವನ್ನು ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ" ಎಂದು ಹೇಳಿದರು.
"ಉಚಿತ ಬಸ್ ಪ್ರಯಾಣದ ಶಕ್ತಿ, 10 ಕೆಜಿ ಉಚಿತ ಅಕ್ಕಿ, 2,000 ರೂಪಾಯಿ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ 3,000 ರೂಪಾಯಿಗಳನ್ನು ನೀಡುತ್ತಿದ್ದೇವೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 76,000 ಕೋಟಿ ರೂಪಾಯಿಗಳನ್ನು ನೀಡುತ್ತಿದೆ. ಹೀಗೆ ಕಳೆದ 3 ವರ್ಷದಿಂದ 1.68 ಲಕ್ಷ ಕೋಟಿ ರೂಪಾಯಿಗಳನ್ನು ನಮ್ಮ ರಾಜ್ಯದ ಜನರಿಗೆ ಉಚಿತವಾಗಿ ನೀಡಿದೆ" ಎಂದು ನುಡಿದರು.
"2028ಕ್ಕೂ ನಮ್ಮ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು 2033ಕ್ಕೆ ನೋಡೋಣ. 2028ಕ್ಕಂತೂ ನಮ್ಮದೇ ಸರ್ಕಾರ ಬರಲಿದೆ. ಆಗ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.