ಬೆಂಗಳೂರು, ಸೆ.14 (DaijiworldNews/AA): ಕರ್ನಾಟಕದಂತಹ ಕೃಷಿ ಅವಲಂಬಿತ ರಾಜ್ಯಗಳಲ್ಲಿ ಬರದ ಪರಿಣಾಮವನ್ನು ಸಮಗ್ರವಾಗಿ ಅಳೆಯುವ ವ್ಯವಸ್ಥೆ ಅತ್ಯಗತ್ಯವಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, "ರಾಜ್ಯದಲ್ಲಿ ಬದಲಾಗುತ್ತಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಬರ ಪರಿಹಾರ ನೀಡುವ ಪ್ರಸ್ತುತ ಮಾನದಂಡಗಳನ್ನು ಮರುಪರಿಶೀಲಿಸಬೇಕಿದೆ. ಮಳೆಯ ಕೊರತೆ, ಬೆಳೆ ನಷ್ಟ, ಒಣಹವೆ ಹಾಗೂ ಸ್ಥಳೀಯ ಪರಿಸ್ಥಿತಿಗಳ ವಾಸ್ತವ ಪರಿಣಾಮಗಳನ್ನು ವೈಜ್ಞಾನಿಕವಾಗಿ ಅರ್ಥೈಸುವುದು ಅತ್ಯಂತ ಮುಖ್ಯ" ಎಂದು ಅಭಿಪ್ರಾಯಪಟ್ಟಿದ್ದಾರೆ.
"ಪ್ರಸ್ತುತ ಚಾಲ್ತಿಯಲ್ಲಿರುವ ಮಾನದಂಡಗಳು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಯಲ್ಲಿ ರೈತರ ನೈಜ ಸಂಕಷ್ಟವನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುತ್ತಿವೆಯೇ ಎಂಬುದನ್ನು ಕೇಂದ್ರ ಸರ್ಕಾರ ಪರಿಶೀಲಿಸಬೇಕಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಗಳ ಪರಿಷ್ಕರಣೆ ಕುರಿತು ರಾಜ್ಯದ ವಾಸ್ತವಾಂಶಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವುದು ಅಗತ್ಯ" ಎಂದು ಪ್ರತಿಪಾದಿಸಿದ್ದಾರೆ.