ಬೆಂಗಳೂರು, ಸೆ.19 (DaijiworldNews/TA): ನಗರದ ಸುಧಾಮನಗರದಲ್ಲಿ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಂತಸ್ತಿನ ಕಟ್ಟಡವೊಂದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಕಟ್ಟಡದ ಕೆಳಮಹಡಿಯಲ್ಲಿ ಹೆಲ್ಮೆಟ್ ಹಾಗೂ ಮೊಬೈಲ್ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದವು. ಬೆಂಕಿ ಕಾಣಿಸಿಕೊಂಡ ಪರಿಣಾಮ ಎರಡೂ ಅಂಗಡಿಗಳಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಟ್ಟಡದ ಮೇಲಿನ ಮಹಡಿಗಳಲ್ಲಿ ವಾಸಸ್ಥಳಗಳಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ನಿವಾಸಿಗಳು ಆತಂಕದಿಂದ ಕಟ್ಟಡದಿಂದ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಬೆಂಕಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಅಗ್ನಿ ಅವಘಡದ ತೀವ್ರತೆ ಹೆಚ್ಚಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.