ಬೆಂಗಳೂರು, ಸೆ.19 (DaijiworldNews/AA): ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ವಿಪಕ್ಷದವರು ಪ್ರತಿಯೊಂದು ವಿಷಯವನ್ನೂ ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಮದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯ ಕುರಿತು ಸಮಗ್ರವಾಗಿ ಚರ್ಚಿಸಿ, ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರನ್ನು ಸಂಕಷ್ಟದಿಂದ ಹೊರತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ" ಎಂದು ಹೇಳಿದರು.
"ಇಡೀ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಯಾಗಬೇಕು. ಬರ ಪರಿಹಾರಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಕೇಂದ್ರ ಸರ್ಕಾರದ ಯಾವ ರೀತಿ ನೆರವು ಕೇಳಬೇಕು ಎಂಬುದರ ಕುರಿತು ಒಗ್ಗಟ್ಟಿನಿಂದ ಚರ್ಚಿಸಬೇಕಿದೆ. ಇದೇ ಉದ್ದೇಶದಿಂದ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಬರ ಪರಿಸ್ಥಿತಿಯ ಜೊತೆಗೆ ಕಸ್ತೂರಿರಂಗನ್ ವರದಿಯ ಕುರಿತು ಚರ್ಚೆಯಾಗಲಿದೆ" ಎಂದು ಮಾಹಿತಿ ನೀಡಿದರು.
"ವಿರೋಧ ಪಕ್ಷಗಳು ಜನರ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಸರ್ಕಾರ ವಿರೋಧಿಸುವುದಿಲ್ಲ. ಆದರೆ ಪ್ರತಿಯೊಂದಕ್ಕೂ ಸಮಯ ಮತ್ತು ಸಂದರ್ಭವಿದ್ದು, ಎಲ್ಲ ವಿಷಯಗಳನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವುದು ಸೂಕ್ತವಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ" ಎಂದರು.