ಗುಜರಾತ್, ಅ.03 (DaijiworldNews/TA): ಕಾರಿಗೆ ಸಿಎನ್ಜಿ ತುಂಬಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಾರೊಂದು ಛಿದ್ರಗೊಂಡ ಘಟನೆ ಗುಜರಾತ್ನ ಕರ್ಜನ್ನಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಪಕ್ಕದಲ್ಲಿದ್ದ ಎರಡು ವಾಹನಗಳಿಗೂ ಹಾನಿಯಾಗಿದೆ.

ಕರ್ಜನ್ನ ರಾಷ್ಟ್ರೀಯ ಹೆದ್ದಾರಿ-48ರಲ್ಲಿರುವ ಸಿಎನ್ಜಿ ಪಂಪ್ನಲ್ಲಿ ಕಾರಿಗೆ ಇಂಧನ ತುಂಬಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಶಬ್ದ ಕೇಳುತ್ತಿದ್ದಂತೆ ಪಂಪ್ನಲ್ಲಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಯಭೀತರಾಗಿ ಸ್ಥಳದಿಂದ ಓಡಿಹೋಗಿದ್ದಾರೆ.
ಘಟನೆಯ ದೃಶ್ಯಗಳು ಪಂಪ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ಫೋಟದ ರಭಸಕ್ಕೆ ಕಾರಿನ ಲೋಹದ ಭಾಗಗಳು ಹಾಗೂ ಗಾಜಿನ ಚೂರುಗಳು ದೂರದವರೆಗೆ ಚಿಮ್ಮಿವೆ. ಅದೃಷ್ಟವಶಾತ್ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕಾರಿನೊಳಗೆ ಯಾರೂ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿ ಪ್ರಯಾಣಿಕರು ಇದ್ದಿದ್ದರೆ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.
ಘಟನೆಯ ಮಾಹಿತಿ ತಿಳಿದ ತಕ್ಷಣ ಕರ್ಜನ್ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಯಾವುದೇ ಬೆಂಕಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸಿಎನ್ಜಿ ಪಂಪ್ನಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನೂ ಅಧಿಕಾರಿಗಳು ಪರಿಶೀಲಿಸಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.