ನವದೆಹಲಿ, ಅ.10 (DaijiworldNews/AA): ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಪ್ರತಿಭಟನೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಗೃಹ ಸಚಿವಾಲಯ ಮಹತ್ವದ ನಿರ್ದೇಶನ ನೀಡಿದೆ.

ನವದೆಹಲಿಯ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಜೆಪಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇರುವ ಕಾರಣ, ಆಯಾ ರಾಜ್ಯಗಳಲ್ಲೂ ಇಂತಹ ಆಂದೋಲನಗಳು ಗಲಭೆಗಳಿಗೆ ತಿರುಗಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಕಟ್ಟುನಿಟ್ಟಿನ ನಿಗಾ ವಹಿಸಬೇಕು. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಗಮನಿಸಿ, ತಮ್ಮ ಸ್ಥಳಗಳಲ್ಲಿ ಅಂತಹ ಪ್ರತಿಭಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೂ ಗೃಹ ಸಚಿವಾಲಯದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಜಂತರ್ ಮಂತರ್ನಲ್ಲಿ 4 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಶನಿವಾರ ಸಂಜೆ 6 ಗಂಟೆಯವರೆಗೆ ಯಾವುದೇ ಇಂಟರ್ನೆಟ್ ಸೌಲಭ್ಯ ಲಭ್ಯವಿರುವುದಿಲ್ಲ. ಪ್ರತಿಭಟನಾ ಸ್ಥಳದಿಂದ ಮಾಹಿತಿ ಹೊರಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.