ನವದೆಹಲಿ, ಅ.10 (DaijiworldNews/AA): ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಾಜೀನಾಮೆ ಕೊಡೋದಷ್ಟೇ ಅಲ್ಲ, ಈ ಸರ್ಕಾರ ಶೀಘ್ರವೇ ಬೀಳಲಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲಾಗುತ್ತದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಇನ್ನು ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, "ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ವಿದೇಶಿ ಶಕ್ತಿಗಳ ಸೂಚನೆಯಂತೆ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಅಭಿವೃದ್ಧಿ ಹೊಂದುತ್ತಿರುವುದನ್ನು ಇಂಡಿಯಾ ಮೈತ್ರಿಕೂಟದ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ. ದೇಶದ 140 ಕೋಟಿ ಜನರ ಸ್ಥಿರತೆಗೆ ಧಕ್ಕೆ ತರುವ ಪ್ರಯತ್ನಗಳನ್ನು ಸರ್ಕಾರ ಸಹಿಸುವುದಿಲ್ಲ" ಎಂದು ಎಚ್ಚರಿಸಿದ್ದಾರೆ.