ಮೈಸೂರು, ಅ.11 (DaijiworldNews/TA): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ. ಚಾಮುಂಡಿಬೆಟ್ಟದಲ್ಲಿ ಭಾನುವಾರ ಶುಭ ಧನುರ್ ಲಗ್ನದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಳಿಗ್ಗೆ ಪತ್ನಿ ಉಷಾ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಅವರು ಸಾಂಪ್ರದಾಯಿಕ ನಂದಿಧ್ವಜ ಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಜಾನಪದ ಕಲಾತಂಡಗಳ ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿದ ಸಿಎಂ, ದೇವಾಲಯದ ಮುಂಭಾಗದಲ್ಲಿ ನಾಲ್ಕು ಈಡುಗಾಯಿಗಳನ್ನು ಒಡೆದು ಭಕ್ತಿ ಸಮರ್ಪಿಸಿದರು.
ನಂತರ ಸಿಎಂ ದಂಪತಿ, ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳೊಂದಿಗೆ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಪೂಜಾ ವಿಧಿವಿಧಾನಗಳ ಬಳಿಕ ಗಣ್ಯರು ಮುಖ್ಯ ವೇದಿಕೆಗೆ ಆಗಮಿಸಿದರು. ಬೆಳಿಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗಿನ ಶುಭ ಧನುರ್ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ವಿರಾಜಮಾನಳಾಗಿದ್ದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಿಜ್ವಾನ್ ಅರ್ಷದ್, ಈಶ್ವರ್ ಖಂಡ್ರೆ, ಡಾ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ ಹಾಗೂ ಮುಖ್ಯಮಂತ್ರಿ ಅವರ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.