ನವದೆಹಲಿ, ಅ.17 (DaijiworldNews/AA): ಒಂದೇ ಕುಟುಂಬದ ಮೂವರು ಮಕ್ಕಳು ಸೇರಿದಂತೆ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರಬೂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಮಹೇಶ್ (37), ಪತ್ನಿ ಲಲಿತಾ (35) ಮತ್ತು ಮಕ್ಕಳಾದ ಲಡ್ಡು (11), ಮಿಶ್ತಿ (7) ಮತ್ತು ಸಾಕ್ಷತ್ (3) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ಮನೆಯಲ್ಲಿ ಯಾವುದೇ ಚಟುವಟಿಕೆ ಕಾಣಿಸದಿದ್ದಾಗ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಮನೆಯೊಳಗೆ ಹೋಗಿ ನೋಡಿದಾಗ ಐವರೂ ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸಿದೆ. ಅಡುಗೆಮನೆಯಲ್ಲಿದ್ದ ಚಹಾ ಪಾತ್ರೆಗಳು, ನೂಡಲ್ಸ್ ಹಾಗೂ ಇತರ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಐವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕುಟುಂಬದ ಸದಸ್ಯರು ಕೊನೆಯದಾಗಿ ನೋಡಲ್ಸ್ ಮತ್ತು ಚಹಾ ಸೇವಿಸಿ ಮಲಗಿದ್ದರು. ಆಹಾರದ ಮೂಲಕ ವಿಷ ದೇಹ ಸೇರಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ವರದಿ ಬಂದ ಬಳಿಕವೇ ಸಾವಿನ ನಿಖರ ಕಾರಣ ತಿಳಿದುಬರಲಿದೆ.