ಚಿತ್ರದುರ್ಗ, ಅ.17 (DaijiworldNews/AK): ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿಗಳೇ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಬಹಿರಂಗಪಡಿಸಿದ್ದಾರೆ. ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಮಾಡಲು ಸಾಧ್ಯವಿಲ್ಲ. ಸ್ಟಿಂಗ್ ಆಪರೇಷನ್ನ ಪಿತಾಮಹ ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣದ ಕುರಿತು ಸೂಕ್ತ ತನಿಖೆಯಾಗಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ದೊಡ್ಡ ಸ್ಥಾನದಲ್ಲಿರಲಿ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
ಮೈಸೂರು ದಸರಾ ವ್ಯವಸ್ಥೆ ಬಗ್ಗೆ ಅಸಮಾಧಾನ
ಮೈಸೂರು ದಸರಾ ಸಂದರ್ಭದಲ್ಲಿ ದನಕರುಗಳ ಜಾತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ದನಕರುಗಳಿಗೆ ಮೇವು ಹಾಗೂ ರೈತರಿಗೆ ಊಟದ ವ್ಯವಸ್ಥೆ ಇಲ್ಲದಿರುವುದು ಬೇಸರದ ಸಂಗತಿ. ದಸರಾ ವೀಕ್ಷಣೆಗೆ ಬಂದ ಮಹಿಳೆಯರಿಗೂ ಊಟದ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬ ದೂರುಗಳಿವೆ. ಮೈಸೂರು ದಸರಾದಲ್ಲಿ ಇಂತಹ ಅವ್ಯವಸ್ಥೆ ಹಿಂದೆಂದೂ ಕಂಡಿರಲಿಲ್ಲ. ದಸರಾಗೆ ಬಂದವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಟಿಂಗ್ ಆಪರೇಷನ್ ವಿಚಾರದಲ್ಲೇ ಮುಳುಗಿದ್ದು, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಬೆಳವಣಿಗೆಗಳು ನಡೆಯಲಿವೆ ಎಂದು ಅವರು ಹೇಳಿದರು.