ಬೆಂಗಳೂರು, ಅ.20 (DaijiworldNews/TA): ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಸಕ್ಕರೆ ಕಾರ್ಖಾನೆಗಳ ನಿರ್ವಹಣೆಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಪ್ರಧಾನಿ ಭೇಟಿಗೆ ಶೀಘ್ರದಲ್ಲೇ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದ್ದು, ಬಳಿಕ ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. “ಕಬ್ಬು ಇದ್ದರೆ ಕಾರ್ಖಾನೆ ಉಳಿಯುತ್ತದೆ. ಕಾರ್ಖಾನೆ ನಷ್ಟವಿಲ್ಲದೆ ನಡೆಯದಿದ್ದರೆ ಮಾಲೀಕರು ಮತ್ತು ಕಾರ್ಮಿಕರು ಉಳಿಯಲು ಸಾಧ್ಯವಿಲ್ಲ. ಇದು ಕೇವಲ ಒಬ್ಬರ ಸಮಸ್ಯೆಯಲ್ಲ; ಎಲ್ಲರ ಬದುಕಿಗೆ ಸಂಬಂಧಿಸಿದ ವಿಚಾರವಾಗಿದೆ” ಎಂದು ಅವರು ಹೇಳಿದರು. ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಅಗತ್ಯವಿದೆ. ಈ ಕುರಿತು ಈಗಾಗಲೇ ಕಾರ್ಖಾನೆ ಮಾಲೀಕರಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಮಾತು ಕೊಟ್ಟು ಬಂದಿದ್ದೇವೆ. ಮುಂದಿನ ಸಭೆಗೆ ಕೇಂದ್ರ ಸಚಿವರು, ಸಂಸದರು ಹಾಗೂ ಸಂಬಂಧಪಟ್ಟ ಪ್ರದೇಶದ ಸಚಿವರನ್ನೂ ಆಹ್ವಾನಿಸಲಾಗುವುದು. ಯಾರೊಬ್ಬರ ಮೇಲೂ ಜವಾಬ್ದಾರಿಯನ್ನು ಹೊರಿಸದೆ, ಎಲ್ಲರ ಸಹಕಾರದೊಂದಿಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇದೇ ವೇಳೆ, ಆಯುಧ ಪೂಜೆಯ ಅಂಗವಾಗಿ ರಾಜ್ಯದ ಜನತೆಗೆ, ವಿಶೇಷವಾಗಿ ವಾಹನ ಚಾಲಕರು, ಮಾಲೀಕರು ಮತ್ತು ಪ್ರಯಾಣಿಕರಿಗೆ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ಆಯುಧ ಪೂಜೆಯಲ್ಲಿ ಭಾಗವಹಿಸಿದ ಅವರು, ಭಾರತೀಯ ಸಂಸ್ಕೃತಿ ಮತ್ತು ಕರ್ನಾಟಕದ ಪರಂಪರೆಯಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸುವ ಸಂಪ್ರದಾಯದ ಮಹತ್ವವನ್ನು ಸ್ಮರಿಸಿದರು. ಆಟೋ, ಬಸ್, ಲಾರಿ, ಟ್ಯಾಕ್ಸಿ, ಖಾಸಗಿ ಹಾಗೂ ಸರ್ಕಾರಿ ವಾಹನಗಳು ಸೇರಿದಂತೆ ಎಲ್ಲ ವಾಹನಗಳ ಚಾಲಕರು, ಮಾಲೀಕರು ಮತ್ತು ಪ್ರಯಾಣಿಕರಿಗೆ ತಾಯಿ ಚಾಮುಂಡೇಶ್ವರಿ ಹಾಗೂ ದುರ್ಗಾದೇವಿಯ ಆಶೀರ್ವಾದ ಇರಲಿ. ಎಲ್ಲರೂ ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿ ಪ್ರಯಾಣಿಸುವಂತಾಗಲಿ ಎಂದು ಹಾರೈಸಿದರು.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆಯ ಬಗ್ಗೆಯೂ ಮಾತನಾಡಿದ ಉಪಮುಖ್ಯಮಂತ್ರಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ಚುನಾವಣೆಗಳಿಗೆ ಸಿದ್ಧರಾಗಿರುವಂತೆ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಡಿಸೆಂಬರ್ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪೂರ್ಣಗೊಳಿಸಬೇಕಿರುವುದರಿಂದ ಸಿದ್ಧತೆಗಳಿಗೆ ವೇಗ ನೀಡಲಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪಂಚಾಯಿತಿ ಮಟ್ಟದಲ್ಲಿ ರಸ್ತೆ ನಿರ್ಮಾಣ ಮತ್ತು ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರಗಳಿಗೆ ಅಗತ್ಯವಿರುವ ಅನುದಾನದ ಕುರಿತು ತಕ್ಷಣ ವರದಿ ಸಲ್ಲಿಸುವಂತೆ ಶಾಸಕರಿಗೆ ಸೂಚಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.