ನವದೆಹಲಿ, ಅ.31 (DaijiworldNews/TA): ರಾಷ್ಟ್ರ ರಾಜಧಾನಿ ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 9.30ರ ವೇಳೆಗೆ ಕಾರ್ಖಾನೆಯ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಮಂಗೋಲ್ಪುರಿ ಕೈಗಾರಿಕಾ ಪ್ರದೇಶದ ಫೇಸ್-1ರಲ್ಲಿರುವ ಶೂ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ರಾತ್ರಿ 9.32ಕ್ಕೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಲಭಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ 20 ಅಗ್ನಿಶಾಮಕ ವಾಹನಗಳು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಅಗ್ನಿಶಾಮಕ ಅಧಿಕಾರಿ ಪರಸ್ ಕುಮಾರ್ ಅವರ ಪ್ರಕಾರ, ಕಾರ್ಖಾನೆಯ ನೆಲಮಾಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ದಟ್ಟ ಹೊಗೆ ಕಟ್ಟಡದ ಮೇಲಿನ ಮಹಡಿಗಳಿಗೂ ವ್ಯಾಪಿಸಿತ್ತು.
ಕಾರ್ಖಾನೆಯೊಳಗೆ ಸಿಲುಕಿದ್ದ ಆರು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಮೂರನೇ ಮಹಡಿಯ ಮೆಟ್ಟಿಲುಗಳಿಂದ ಒಬ್ಬರನ್ನು ಹಾಗೂ ನಾಲ್ಕನೇ ಮಹಡಿಯಿಂದ ಐವರನ್ನು ಹೊರತರಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಆರು ಮಂದಿಯನ್ನು ತಕ್ಷಣ ಮಂಗೋಲ್ಪುರಿಯ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರಲ್ಲಿ ನಾಲ್ವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಉಳಿದ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕಾರ್ಖಾನೆಯ ಮಾಲೀಕರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಹೊರ ಜಿಲ್ಲಾ ಡಿಸಿಪಿ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಎಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂಬುದನ್ನು ಪತ್ತೆಹಚ್ಚಲು ಗುತ್ತಿಗೆದಾರರು ಮತ್ತು ಕಾರ್ಮಿಕರನ್ನು ವಿಚಾರಣೆ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದು, ಕಟ್ಟಡದಲ್ಲಿ ತಂಪುಗೊಳಿಸುವ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಖಾನೆಯಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ? ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಎಂಬ ಹಲವು ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಬಳಿಕ ಉತ್ತರ ಸಿಗಬೇಕಿದೆ.