ಉಜ್ಜಯಿನಿ, ನ.02 (DaijiworldNews/TA): ಹೋಟೆಲ್ನ ತ್ಯಾಜ್ಯ ಕೊಠಡಿಯನ್ನು ಸ್ವಚ್ಛಗೊಳಿಸಲು ತೆರಳಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಾರ್ಮಿಕರನ್ನು ರಕ್ಷಿಸಲು ಕೊಠಡಿಯೊಳಗೆ ತೆರಳಿದ್ದ ಇನ್ನಿಬ್ಬರು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಜ್ಜಯಿನಿ-ದೇವಾಸ್ ರಸ್ತೆಯಲ್ಲಿರುವ ಶ್ರೀ ಗಂಗಾ ಖಾಸಗಿ ಹೋಟೆಲ್ನಲ್ಲಿ ರಾತ್ರಿ ಸುಮಾರು 11 ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಹೋಟೆಲ್ನ ತ್ಯಾಜ್ಯ ಸಂಗ್ರಹ ಕೊಠಡಿಯನ್ನು ಸ್ವಚ್ಛಗೊಳಿಸಲು ನಾಲ್ವರು ಕಾರ್ಮಿಕರು ಒಳಗೆ ತೆರಳಿದ್ದರು. ಆದರೆ ಸ್ವಲ್ಪ ಸಮಯದಲ್ಲೇ ಅವರು ಕೊಠಡಿಯೊಳಗೆ ಸಿಲುಕಿಕೊಂಡು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂದು ಉಜ್ಜಯಿನಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಮಿಕರನ್ನು ಹೊರತೆಗೆದಿದ್ದಾರೆ. ಬಳಿಕ ಅವರಿಗೆ ಸಿಪಿಆರ್ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ನಾಲ್ವರೂ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕೊಠಡಿಯೊಳಗೆ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ಇನ್ನಿಬ್ಬರು ವ್ಯಕ್ತಿಗಳು ಒಳಗೆ ಪ್ರವೇಶಿಸಿದ್ದರು. ಆದರೆ ಅವರಿಗೂ ಉಸಿರಾಟದ ಸಮಸ್ಯೆ ಉಂಟಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಇಬ್ಬರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕಮಲೇಶ್ ತಂಬೋಲಿ, ನಿತಿನ್ ವಾಲ್ಮಿಕ್, ಮನೋಜ್ ಮೀನಾ ಮತ್ತು ವಾಹಿದ್ ಎಂದು ಗುರುತಿಸಲಾಗಿದೆ.
ನಾಲ್ವರು ಕಾರ್ಮಿಕರು ತ್ಯಾಜ್ಯ ಕೊಠಡಿಯನ್ನು ಸ್ವಚ್ಛಗೊಳಿಸಲು ಉದ್ದೇಶಪೂರ್ವಕವಾಗಿ ಒಳಗೆ ತೆರಳಿದ್ದರೇ ಅಥವಾ ಆಕಸ್ಮಿಕವಾಗಿ ಕೊಠಡಿಯೊಳಗೆ ಬಿದ್ದಿದ್ದರೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ರೋಷನ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕೊಠಡಿಯೊಳಗೆ ಉಸಿರುಗಟ್ಟಲು ಕಾರಣವಾದ ಅಂಶಗಳೇನು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.
ಘಟನೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ನಾಲ್ವರು ಕಾರ್ಮಿಕರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಉಜ್ಜಯಿನಿಯ ಖಾಸಗಿ ಹೋಟೆಲ್ನಲ್ಲಿ ಚೇಂಬರ್ ಸ್ವಚ್ಛಗೊಳಿಸುವ ವೇಳೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಸುದ್ದಿ ತೀವ್ರ ನೋವು ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. ಅಲ್ಲದೆ, ಮೃತರ ಆತ್ಮಗಳಿಗೆ ಬಾಬಾ ಮಹಾಕಾಲ್ ಅವರ ಪಾದದಲ್ಲಿ ಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ಈ ನಷ್ಟವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.