ಮೈಸೂರು, ನ.02 (DaijiworldNews/TA): ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಮಾಲಿನ್ಯರಹಿತವಾಗಿ ಆಚರಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕರು ಮತ್ತು ಪಟಾಕಿ ಮಾರಾಟಗಾರರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕೆ ಆದ್ಯತೆ ನೀಡಿರುವ ಪಾಲಿಕೆ, ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ನಿಗದಿತ ಸಮಯದಲ್ಲೇ ಪಟಾಕಿ ಸಿಡಿಸಬೇಕು ಎಂದು ಸೂಚಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯ ಹೊರತುಪಡಿಸಿ ಬೇರೆ ಅವಧಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಸೇರಿದಂತೆ ನಿಷೇಧಿತ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ಪಾಲಿಕೆ ಸ್ಪಷ್ಟಪಡಿಸಿದೆ.
ಹಸಿರು ಪಟಾಕಿ ಖರೀದಿಸುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಪಟಾಕಿ ಪ್ಯಾಕೆಟ್ಗಳ ಮೇಲೆ ಹಸಿರು ಪಟಾಕಿಯ ಅಧಿಕೃತ ಚಿಹ್ನೆ ಹಾಗೂ ಕ್ಯೂಆರ್ (QR) ಕೋಡ್ ಇರುವುದನ್ನು ಪರಿಶೀಲಿಸಬೇಕು. ಅಧಿಕೃತವಾಗಿ ಗುರುತಿಸಲ್ಪಟ್ಟ ಹಸಿರು ಪಟಾಕಿಗಳನ್ನು ಮಾತ್ರ ಖರೀದಿಸಿ ಬಳಸುವಂತೆ ಪಾಲಿಕೆ ಮನವಿ ಮಾಡಿದೆ. ಪಟಾಕಿ ಮಾರಾಟಗಾರರು ಕೂಡ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ನಿಯಮ ಉಲ್ಲಂಘಿಸುವ ಪಟಾಕಿ ಮಾರಾಟಗಾರರು ಹಾಗೂ ಸಾರ್ವಜನಿಕರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ತಿಳಿಸಿದೆ. ದೀಪಾವಳಿ ಸಂಭ್ರಮದ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡಬಾರದು. ಪಟಾಕಿಗಳಿಂದ ಮಕ್ಕಳು, ಹಿರಿಯ ನಾಗರಿಕರು, ರೋಗಿಗಳು, ಪಕ್ಷಿಗಳು ಹಾಗೂ ಪ್ರಾಣಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೀಗಾಗಿ ಸಾರ್ವಜನಿಕರು ಮತ್ತು ಪಟಾಕಿ ವ್ಯಾಪಾರಿಗಳು ಪಾಲಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುರಕ್ಷಿತ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಸಹಕರಿಸಬೇಕು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.