ನವದೆಹಲಿ, ನ.02 (DaijiworldNews/AA): ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರು ಸಲ್ಲಿಸಿದ್ದ ಕಾಣಿಕೆ ಹಣ ದುರುಪಯೋಗ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಈಗಾಗಲೇ ಕೆಳಹಂತದ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ಈ ಹಿನ್ನೆಲೆ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿ ಮಹತ್ವದ ಆದೇಶ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆ ವೇಳೆ ದೂರುದಾರರಾಗಿ ತಮ್ಮ ವಾದ ಮಂಡಿಸಲು ಹಾಗೂ ನ್ಯಾಯಾಲಯದ ವಿಚಾರಣೆಗೆ ಸಹಕರಿಸಲು ಅನುಮತಿ ನೀಡಿದೆ.
ವಿಚಾರಣೆ ವೇಳೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡವು ಅಯೋಧ್ಯೆಯ ಕೆಳಹಂತದ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ ಎಂದು ಕೋರ್ಟ್ ಗೆ ತಿಳಿಸಿದರು.
ಮಂದಿರದ ಕಾಣಿಕೆ ಹಣವನ್ನು ಅಕ್ರಮವಾಗಿ ತೆಗೆದುಕೊಂಡು ಹೋಗಿರುವ ಅಥವಾ ಮುಚ್ಚಿಟ್ಟಿರುವ 105 ಘಟನೆಗಳು ಪತ್ತೆಯಾಗಿವೆ ಎಂದು ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಈ ಹಿಂದೆ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿತ್ತು. ಇದೀಗ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳು ಕೆಳಹಂತದ ನ್ಯಾಯಾಲಯದಲ್ಲಿ ನಡೆಯಲಿವೆ.