ಬೆಂಗಳೂರು, ನ.03 (DaijiworldNews/TA): ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರ ಸಂಕಷ್ಟಕ್ಕೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದ ತುರ್ತು ಆರ್ಥಿಕ ನೆರವು ಕೋರಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಮನವಿಯನ್ನು ಖುದ್ದಾಗಿ ಸಲ್ಲಿಸಲು ಭೇಟಿಗೆ ಸಮಯಾವಕಾಶ ನೀಡುವಂತೆ ಪತ್ರದಲ್ಲಿ ವಿನಂತಿಸಿದ್ದಾರೆ. ಇದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೂ ಡಿಸಿಎಂ ಪತ್ರ ಬರೆದಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕರ್ನಾಟಕವು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಗಂಭೀರ ಕೃಷಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದ 226 ತಾಲೂಕುಗಳು ಬರದಿಂದ ಬಾಧಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಇದರಿಂದ ಅಂದಾಜು ರೂ. 2,62,481.88 ಕೋಟಿ ಆರ್ಥಿಕ ನಷ್ಟ ಸಂಭವಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬರ ಪರಿಸ್ಥಿತಿಯಿಂದ ಲಕ್ಷಾಂತರ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನೋಪಾಯ ಹಾಗೂ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ ಅಡಿಯಲ್ಲಿ ಪರಿಹಾರ ಕೋರಿ ಕರ್ನಾಟಕ ಸರ್ಕಾರವು ಸಮಗ್ರ ಮನವಿಯನ್ನು ಸಿದ್ಧಪಡಿಸಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಎದುರಿಸಲು ರೂ. 22,400.58 ಕೋಟಿ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಪ್ರದೇಶಗಳ ದುರ್ಬಲ ವರ್ಗಗಳ ಜೀವನೋಪಾಯವನ್ನು ರಕ್ಷಿಸುವುದು ಈ ಮನವಿಯ ಪ್ರಮುಖ ಉದ್ದೇಶವಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ವಿಪತ್ತು ಪರಿಹಾರ ನೆರವಿನ ಸಮನ್ವಯದಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಮುಖ ಪಾತ್ರ ವಹಿಸುವುದರಿಂದ, ಈ ನಿರ್ಣಾಯಕ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವೈಯಕ್ತಿಕ ಮಧ್ಯಪ್ರವೇಶ ಅಗತ್ಯವಾಗಿದೆ. ಇದರಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಸಕಾಲದಲ್ಲಿ ನೆರವು ದೊರೆಯಲು ಅನುಕೂಲವಾಗಲಿದೆ ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ.
ರೈತರ ಕಲ್ಯಾಣವು ರಾಜಕೀಯ ಹಾಗೂ ಆಡಳಿತಾತ್ಮಕ ಗಡಿಗಳನ್ನು ಮೀರಿದ ವಿಷಯವಾಗಿದೆ. ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಪ್ರಧಾನಿ ಅವರಿಗೆ ನೇರವಾಗಿ ವಿವರಿಸಿ, ಪರಿಹಾರದ ಮನವಿಯನ್ನು ಸಲ್ಲಿಸಲು ಹಾಗೂ ಅಗತ್ಯ ಆರ್ಥಿಕ ನೆರವನ್ನು ತ್ವರಿತವಾಗಿ ಪರಿಗಣಿಸಿ ಬಿಡುಗಡೆ ಮಾಡುವಂತೆ ಕೋರಲು ಶೀಘ್ರದಲ್ಲೇ ಭೇಟಿಗೆ ಸಮಯ ನೀಡಬೇಕೆಂದು ಡಿಸಿಎಂ ಪತ್ರದಲ್ಲಿ ವಿನಂತಿಸಿದ್ದಾರೆ.