ನವದೆಹಲಿ, ನ.04 (DaijiworldNews/AK): ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹತೆ ವಿಧಿಸುವ ಕಾನೂನುಗಳು ಇಂದಿನ ಜನಸಂಖ್ಯಾ ಪರಿಸ್ಥಿತಿಯಲ್ಲಿ ಪ್ರಸ್ತುತತೆ ಕಳೆದುಕೊಂಡಿವೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಭಾರತದಲ್ಲಿ ಒಟ್ಟು ಜನನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎರಡು ಮಕ್ಕಳ ನಿಯಮದ ಆಧಾರದಲ್ಲಿ ಜಾರಿಯಲ್ಲಿರುವ ಕಾನೂನುಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾ. ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 2003ರಲ್ಲಿ ಜಾವೇದ್ ವಿರುದ್ಧ ಹರಿಯಾಣ ರಾಜ್ಯ ಪ್ರಕರಣದಲ್ಲಿ ಮೂರು ನ್ಯಾಯಮೂರ್ತಿಗಳ ಪೀಠ ನೀಡಿದ್ದ ತೀರ್ಪನ್ನು ಮರುಪರಿಶೀಲನೆಗಾಗಿ ದೊಡ್ಡ ಪೀಠಕ್ಕೆ ವರ್ಗಾಯಿಸಿದೆ.
2003ರ ತೀರ್ಪಿನಲ್ಲಿ ಹರಿಯಾಣ ಪಂಚಾಯತ್ ರಾಜ್ ಕಾಯ್ದೆಯಡಿ ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಅನರ್ಹರು ಎಂಬ ನಿಯಮದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು.
ಪ್ರಸ್ತುತ ಭಾರತದಲ್ಲಿ ಒಟ್ಟು ಫಲವತ್ತತೆ ದರ (ಜನನ ಪ್ರಮಾಣ) 1.9ಕ್ಕೆ ಇಳಿದಿದೆ. 2003ರಲ್ಲಿ ಇದು 3ರಷ್ಟಿತ್ತು. ಜನಸಂಖ್ಯೆ ಸ್ಥಿರವಾಗಿ ಮುಂದುವರಿಯಲು ಅಗತ್ಯವಿರುವ ಬದಲಿ ಫಲವತ್ತತೆ ದರ 2.1 ಆಗಿದೆ. ಈ ಪ್ರಮಾಣಕ್ಕಿಂತ ಫಲವತ್ತತೆ ದರ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ವೃದ್ಧರ ಜನಸಂಖ್ಯೆ ಹೆಚ್ಚಳವಾಗುವ ಮತ್ತು ದುಡಿಯುವ ವಯೋಮಾನದ ಜನರ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಗಮನಿಸಿದೆ.
ಜನಸಂಖ್ಯಾ ಹೆಚ್ಚಳದ ಭೀತಿಯ ಆಧಾರದಲ್ಲಿ ರೂಪಿಸಲಾದ ಎರಡು ಮಕ್ಕಳ ನಿಯಮಗಳು ಈಗಿನ ಬದಲಾಗಿರುವ ಜನಸಂಖ್ಯಾ ಪರಿಸ್ಥಿತಿಗೆ ಹೊಂದಿಕೆಯಾಗುವುದಿಲ್ಲ. ಇಂತಹ ಬದಲಾವಣೆಗಳನ್ನು ನಿರ್ಲಕ್ಷಿಸಿದರೆ ದೇಶ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.