ನವದೆಹಲಿ, ನ.05 (DaijiworldNews/AA): ಪ್ರತಿವರ್ಷ ಲಕ್ಷಾಂತರ ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನು ಬರೆಯುತ್ತಾರೆ. ಈ ಪೈಕಿ ಅರ್ಹ ಅಭ್ಯರ್ಥಿಗಳಷ್ಟೇ ಉತ್ತೀರ್ಣರಾಗುವಲ್ಲಿ ಸಫಲಾರಗುತ್ತಾರೆ. ಹೀಗೆ 2025ರ ಯುಪಿಎಸ್ಸಿ ಪರೀಕ್ಷೆಯಲ್ಲಿ ಅಖಿಲ ಭಾರತ 31 ನೇ ರ್ಯಾಂಕ್ ಪಡೆದು ಉತ್ತೀರ್ಣರಾದ ಆರ್ಯನ್ ಯಾದವ್ ಅವರ ಯಶೋಗಾಥೆ ಇದು.

ನವದೆಹಲಿಯಲ್ಲಿ ಜನಿಸಿ ಹರಿಯಾಣದ ಗುರುಗ್ರಾಮದಲ್ಲಿ ಬೆಳೆದ ಆರ್ಯನ್, ಗುರುಗ್ರಾಮದ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ಅವರು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ರೂರ್ಕಿಯಿಂದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು. ಅವರು 2023 ರಲ್ಲಿ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದರು.
ಯುಪಿಎಸ್ಸಿ ಪರೀಕ್ಷೆ ಬರೆಯುವ ಮುನ್ನ ಆರ್ಯನ್ ಅವರು ಹಲವಾರು ಶೈಕ್ಷಣಿಕ ಸಾಧನೆಗಳನ್ನು ಮಾಡಿದ್ದರು. ಆರ್ಯನ್ 2019 ರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಆಲ್ ಇಂಡಿಯಾ 388 ನೇ ರ್ಯಾಂಕ್ ಪಡೆದಿದ್ದರು ಮತ್ತು 2017 ರಲ್ಲಿ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನೆ (ಕೆವಿಪಿವೈ) ಫೆಲೋಶಿಪ್ ಪಡೆದುಕೊಂಡಿದ್ದರು.
ನಂತರ ಯುಪಿಎಸ್ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಆರ್ಯನ್ ಅವರು ಮುಖ್ಯ ಪರೀಕ್ಷೆಗೆ ಗಣಿತವನ್ನು ಐಚ್ಛಿಕ ವಿಷಯವಾಗಿ ಆಯ್ಕೆ ಮಾಡಿಕೊಂಡರು. 2024ರಲ್ಲಿ ಮೊದಲ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು ಉತ್ತೀರ್ಣರಾಗಲು ವಿಫಲರಾಗುತ್ತಾರೆ.
ಬಳಿಕ 2025ರಲ್ಲಿ 2ನೇ ಬಾರಿಗೆಯುಪಿಎಸ್ಸಿ ಪರೀಕ್ಷೆ ಬರೆದ ಆರ್ಯನ್ ಅವರು 31 ನೇ ಅಖಿಲ ಭಾರತ ರ್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಈ ಮೂಲಕ ಅನೇಕ ಯುಪಿಎಸ್ಸಿ ಅಭ್ಯರ್ಥಿಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ.