ಬೆಂಗಳೂರು, ನ.05 (DaijiworldNews/TA): ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ವಿಚಾರವಾಗಿ ರಾಜಕೀಯ ವಾಕ್ಸಮರ ಜೋರಾಗಿದೆ. ಬಸ್ ಟಿಕೆಟ್ ದರ ಹೆಚ್ಚಳವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದು, 'ಬಸ್ಗಳನ್ನು ಗಾಳಿಯಲ್ಲಿ ಅಥವಾ ನೀರಿನಲ್ಲಿ ಓಡಿಸಲು ಸಾಧ್ಯವಿಲ್ಲ, ಪೆಟ್ರೋಲ್ ಮತ್ತು ಡೀಸೆಲ್ನಿಂದಲೇ ಓಡಿಸಬೇಕು' ಎಂದು ಹೇಳಿದ್ದಾರೆ. ಇದೇ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಸ್ ಪ್ರಯಾಣ ದರ ಏರಿಕೆಗೆ ಯಾರು ಹೊಣೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಬಸ್ಗಳನ್ನು ಗಾಳಿಯಲ್ಲಿ ಅಥವಾ ನೀರಿನಲ್ಲಿ ಓಡಿಸಲು ಸಾಧ್ಯವಿಲ್ಲ. ಅವು ಪೆಟ್ರೋಲ್ ಮತ್ತು ಡೀಸೆಲ್ನಿಂದಲೇ ಸಂಚರಿಸುತ್ತವೆ. ಇಂಧನ ಬೆಲೆ ಹೆಚ್ಚಾದಾಗ ಸಾರಿಗೆ ಸಂಸ್ಥೆಗಳ ಮೇಲೂ ಆರ್ಥಿಕ ಹೊರೆ ಬೀಳುತ್ತದೆ ಎಂದು ಹೇಳಿದರು.
ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಖರೀದಿಸುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಅದರ ಲಾಭವನ್ನು ಜನರಿಗೆ ಏಕೆ ವರ್ಗಾಯಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಮೊದಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದರೆ ದೇಶದ ಹಿತದೃಷ್ಟಿಯಿಂದ ಎಂದು ಸಮರ್ಥಿಸಿಕೊಳ್ಳುವ ಬಿಜೆಪಿ, ರಾಜ್ಯ ಸರ್ಕಾರ ಬಸ್ ದರ ಏರಿಸಿದರೆ ಮಾತ್ರ ಜನರ ಮೇಲೆ ಹೊರೆ ಎಂದು ಟೀಕಿಸುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪ್ರತಿಭಟನೆ ನಡೆಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವಂತೆ ಒತ್ತಾಯಿಸಲಿ. ಇಂಧನ ಬೆಲೆ ಕಡಿಮೆಯಾದರೆ ಬಸ್ ಪ್ರಯಾಣ ದರವೂ ಕಡಿಮೆಯಾಗಲಿದೆ ಎಂದು ಹೇಳಿದರು.
ಮೆಟ್ರೋ ಮತ್ತು ಬಸ್ ಪ್ರಯಾಣ ದರಗಳನ್ನು ಯಾವುದೇ ಕಾರಣವಿಲ್ಲದೆ ಹೆಚ್ಚಿಸುವುದಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದಾಗ ಬಿಜೆಪಿ ಏಕೆ ಪ್ರಶ್ನಿಸುವುದಿಲ್ಲ? ಪಾಮ್ ಆಯಿಲ್, ಅಡುಗೆ ಎಣ್ಣೆ ಹಾಗೂ ಬೇಳೆಕಾಳುಗಳ ಬೆಲೆ ಹೆಚ್ಚಾದಾಗ ಬಿಜೆಪಿ ಏಕೆ ಪ್ರತಿಭಟನೆ ನಡೆಸುವುದಿಲ್ಲ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರದ ಬಳಿ ಮಾತ್ರ ಲೆಕ್ಕ ಕೇಳುತ್ತಾ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು. ಒಟ್ಟಿನಲ್ಲಿ, ಬಸ್ ಪ್ರಯಾಣ ದರ ಏರಿಕೆ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.