ಬೆಂಗಳೂರು, ನ.06 (DaijiworldNews/AA): ರಾಜ್ಯದಲ್ಲಿ ಬರಗಾಲದಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಜ್ಞಾಪಕ ಪತ್ರ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎನ್ಡಿಆರ್ಎಫ್ ಮಾರ್ಗಸೂಚಿಗಳ ಅನ್ವಯ 22,000 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಬರಗಾಲದಿಂದ ಉಂಟಾಗಿರುವ ಒಟ್ಟು ನಷ್ಟವನ್ನು 62,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಮಯಾವಕಾಶ ನೀಡಿದರೆ ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪ್ರಧಾನಿ, ಗೃಹ ಸಚಿವರು ಮತ್ತು ಕೃಷಿ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಮನವಿ ಸಲ್ಲಿಸುವ ಉದ್ದೇಶವಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
"ಸರ್ಕಾರ ಯಾವುದೇ ವೆಚ್ಚ ಮಾಡಿದರೂ ಅದು ಆರ್ಥಿಕ ಹೊರೆ ಎನಿಸಿಕೊಳ್ಳುತ್ತದೆ. ಹೀಗಾಗಿ ಆದಾಯ ಮತ್ತು ವೆಚ್ಚ ಎರಡನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಾರಿ ಕಳೆದ ವರ್ಷಕ್ಕಿಂತ ಸರ್ಕಾರದ ಆದಾಯ ಉತ್ತಮವಾಗಿದೆ" ಎಂದು ಹೇಳಿದ್ದಾರೆ.