ಬೆಳಗಾವಿ, ನ.24 (DaijiworldNews/HR): ಸಚಿವ ರಮೇಶ ಜಾರಕಿಹೊಳಿ ಅವರು ತಮ್ಮೊಂದಿಗೆ ಬಿಜೆಪಿ ಸೇರಿದವರಿಗೆ ಸಚಿವ ಸ್ಥಾನ ದೊರಕಿಸಿಕೊಂಡುವುದಕ್ಕಾಗಿ ದೆಹಲಿ ಪ್ರವಾಸ ಕೈಗೊಂಡಿರಲೂಬಹುದು, ಹಾಗಾಗಿ ಅದರಲ್ಲಿ ತಪ್ಪೇನಿಲ್ಲ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಚಿವ ರಮೇಶ ಜಾರಕಿಹೊಳಿ ಅವರು ತಮ್ಮೊಂದಿಗೆ ಬಿಜೆಪಿ ಸೇರಿದವರಿಗೆ ಸಚಿವ ಸ್ಥಾನ ದೊರಕಿಸಿಕೊಂಡುವುದಕ್ಕಾಗಿ ದೆಹಲಿ ಪ್ರವಾಸ ಕೈಗೊಂಡಿರಲೂಬಹುದು, ಮತ್ತೆ ಎಲ್ಲ ಸಚಿವರೂ ಕ್ರಿಯಾಶೀಲವಾಗಿ ಓಡಾಡಬೇಕು ಜೊತೆಗೆ ಅನೇಕ ಯೋಜನೆಗಳ ಬಗ್ಗೆ ಚರ್ಚಿಸಲು ದೆಹಲಿಗೂ ಹೋಗಬೇಕು. ಈ ನಿಟ್ಟಿನಲ್ಲಿ ರಮೇಶ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ. ತಮ್ಮೊಂದಿಗೆ ಬಂದವರ ಹಿತ ಕಾಯಲು ಅವರು ಮುಂದಾಗಿದ್ದರೆ ಅದರಲ್ಲಿ ತಪ್ಪೇನಿಲ್ಲ" ಎಂದರು.
ಇನ್ನು ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತು ಮಾತನಾಡಿದ ಅವರು, "ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ, ಬಿ.ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಹಾಗಾಗಿ ವಿರೋಧ ಪಕ್ಷಗಳು ಹೇಳುವ ವದಂತಿಗಳಿಗೆ ಹೆಚ್ಚು ಬೆಲೆ ಕೊಡಬೇಕಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.