ನವದೆಹಲಿ,ಡಿ.15 (DaijiworldNews/HR): ಕೊರೊನಾ ಸೋಂಕಿನ ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಲೋಕಸಭೆಯ ಚಳಿಗಾಲದ ಅಧಿವೇಶನ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರದ ತಿಳಿಸಿದೆ.

ಲೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲು ಬಹುತೇಕ ಪಕ್ಷಗಳು ಸಹಮತ ವ್ಯಕ್ತಪಡಿಸಿದ್ದು, ಜನವರಿಯಲ್ಲಿ ಬಜೆಟ್ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇನ್ನು ದೆಹಲಿಯಲ್ಲಿ ರೈತರು ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಅಧಿವೇಶನ ನಡೆಸಬೇಕೆಂದು ಬೇಡಿಕೆ ಇಟ್ಟು ಪತ್ರ ಬರೆದಿದ್ದ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿಗೆ ಪ್ರಹ್ಲಾದ್ ಜೋಶಿ ಈ ಉತ್ತರ ನೀಡಿದ್ದಾರೆ.
ರಂಜನ್ ಬೇಡಿಕೆಗೆ ಉತ್ತರ ನೀಡಿರುವ ಪ್ರಹ್ಲಾದ್ ಜೋಶಿ , ಈ ಬಗ್ಗೆ ಎಲ್ಲಾ ಪಕ್ಷಗಳ ಮುಖಂಡರ ಜತೆ ಚರ್ಚೆ ನಡೆಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅಧಿವೇಶನ ನಡೆಸುವುದು ಬೇಡ ಎಂಬ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿರುವುದಾಗಿ ತಿಳಿಸಿದ್ದಾರೆ.