ನವದೆಹಲಿ: ಫೆ.02 (DaijiworldNews/HR): ದೇಶದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಕುರಿತು ಇಂದು ರಾಜ್ಯಸಭೆಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, "ಕೊರೊನಾ ಪ್ರಕರಣಗಳಲ್ಲಿ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ವರದಿಯಾಗಿರುವ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಅತಿ ಕಡಿಮೆಯಾಗಿದೆ ಎಂದು" ತಿಳಿಸಿದೆ.
ಕೇಂದ್ರಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು ಮಾತನಾಡಿ,"ದೇಶದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ದೇಶದ ಚೇತರಿಕೆ ಪ್ರಮಾಣವು ಶೇಕಡ 96.94 ರಷ್ಟಿದೆ. ಸಾವಿನ ಪ್ರಮಾಣವು ಶೇಕಡಾ 1.44 ರಷ್ಟಿದ್ದು, ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಜನಸಂಖ್ಯೆಗೆ ಅನುಗುಣವಾಗಿ ದೇಶದಲ್ಲಿ ವರದಿಯಾಗಿರುವ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಅತಿ ಕಡಿಮೆಯಾಗಿದೆ" ಎಂದರು.
ಇನ್ನು "ಸೋಂಕನ್ನು ನಿಯಂತ್ರಿಸಲು ಸರ್ಕಾರವು ಕೊರೊನಾ ಪರೀಕ್ಷೆ, ಸೋಂಕಿನ ಸಂಪರ್ಕ ಪತ್ತೆ ಹಚ್ಚುವಿಕೆ, ಪ್ರತ್ಯೇಕವಾಸ ಮತ್ತು ಕಂಟೈನ್ಮೆಂಟ್ ವಿಧಾನಗಳನ್ನು ಅನುಸರಿಸುತ್ತಿದೆ. ಈ ವಿಧಾನವನ್ನು ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕವಾಗಿ ಶಿಫಾರಸು ಮಾಡಿದೆ" ಎಂದು ಹೇಳಿದ್ದಾರೆ.