ನವದೆಹಲಿ, ಮೇ. 09 (DaijiworldNews/AK): ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ 2025ರ ಐಪಿಎಲ್ ಅನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ.

ಜಮ್ಮು ಮತ್ತು ಪಠಾಣ್ಕೋಟ್ನ ಹತ್ತಿರದ ಪ್ರದೇಶಗಳಲ್ಲಿ ವಾಯುದಾಳಿಯ ಎಚ್ಚರಿಕೆಯಿಂದಾಗಿ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಿದ ಒಂದು ದಿನದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶುಕ್ರವಾರ ಪಂದ್ಯಾವಳಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಘೋಷಣೆ ಮಾಡಿದೆ. ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಅಭಿಮಾನಿಗಳ ಸುರಕ್ಷತೆಯೇ ಪ್ರಮುಖ ಕಾಳಜಿ ಎಂದು ಅವರು ಉಲ್ಲೇಖಿಸಿದ್ದಾರೆ.
ಹೀಗಾಗಿ ಪ್ಲೇ ಆಫ್ಸ್ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದೆ.ಆಟಗಾರರನ್ನು ಸದ್ಯಕ್ಕೆ ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸುವ ವ್ಯವಸ್ಥೆಗಳ ಬಗ್ಗೆ ಗಮನಹರಿಸಲಿದೆ. ಉದ್ವಿಗ್ನತೆ ಶಮನವಾದ ಬಳಿಕ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ ಉನ್ನತ ಮೂಲಗಳು ತಿಳಿಸಿವೆ.