ಮುಂಬೈ,ಜು. 12 (DaijiworldNews/AK): ವಿರಾಟ್ ಕೊಹ್ಲಿಯ ಹೆಸರಿನಲ್ಲಿರುವ ದಾಖಲೆಗಳನ್ನು ಶುಭ್ಮನ್ ಗಿಲ್ ಮುರಿಯುತ್ತಿದ್ದಾರೆ. ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಗಿಲ್ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ 44 ಎಸೆತಗಳನ್ನು ಎದುರಿಸಿ 16 ರನ್ ಕಲೆಹಾಕಿದ್ದರು. ಈ ಹದಿನಾರು ರನ್ಗಳೊಂದಿಗೆ ಶುಭ್ಮನ್ ಆಂಗ್ಲರ ನಾಡಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ನಡೆದ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ಕಿಂಗ್ ಕೊಹ್ಲಿ 5 ಪಂದ್ಯಗಳ ಮೂಲಕ 593 ರನ್ ಕಲೆಹಾಕಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಶುಭ್ಮನ್ ಗಿಲ್ ಕೇವಲ 3 ಪಂದ್ಯಗಳ ಮೂಲಕ ಅಳಿಸಿ ಹಾಕಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿರುವ ಶುಭ್ಮನ್ ಗಿಲ್ ಈವರೆಗೆ 3 ಪಂದ್ಯಗಳಲ್ಲಿ 5 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 2 ಶತಕ ಹಾಗೂ ಒಂದು ದ್ವಿಶತಕದೊಂದಿಗೆ ಒಟ್ಟು 601 ರನ್ಗಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ಗಳಿಸಿದ ಭಾರತೀಯ ಕ್ಯಾಪ್ಟನ್ ಎಂಬ ಹೆಗ್ಗಳಿಕೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ.