ಬೆಂಗಳೂರು, ಏ. 05 (DaijiworldNews/TA): ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2026 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹೈವೋಲ್ಟೇಜ್ ಪಂದ್ಯವಾಗಿರುವ ಹಿನ್ನೆಲೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಅಭಿಮಾನಿಗಳ ಭಾರೀ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಸುಮಾರು 2,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಪಂದ್ಯದಲ್ಲಿ 70ಕ್ಕೂ ಹೆಚ್ಚು ಮೊಬೈಲ್ಗಳು ಕಳ್ಳತನವಾದ ಹಿನ್ನೆಲೆ, ಈ ಬಾರಿ ಹೆಚ್ಚುವರಿ ಎಚ್ಚರಿಕೆ ವಹಿಸಲಾಗಿದೆ. ಅಭಿಮಾನಿಗಳ ಅನುಕೂಲಕ್ಕಾಗಿ ಎರಡು ಬ್ಯಾಗೇಜ್ ಕೌಂಟರ್ಗಳನ್ನು ನಿರ್ಮಿಸಲಾಗಿದ್ದು, ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಜನಸಂದಣಿ ನಿಯಂತ್ರಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸೌಲಭ್ಯಗಳನ್ನು ವ್ಯವಸ್ಥಿತಗೊಳಿಸಲಾಗಿದ್ದು, ಮೆಟ್ರೋ ಸೇವೆಯ ಅವಧಿಯನ್ನೂ ವಿಸ್ತರಿಸಲಾಗಿದೆ. ಇನ್ನೊಂದೆಡೆ, ಟಿಕೆಟ್ ಇಲ್ಲದವರು ಸ್ಟೇಡಿಯಂ ಸುತ್ತಮುತ್ತ ಪ್ರವೇಶಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಕಲಿ ಟಿಕೆಟ್ ಮಾರಾಟ ಮತ್ತು ಬೆಟ್ಟಿಂಗ್ ಚಟುವಟಿಕೆಗಳ ಮೇಲೂ ಸಿಸಿಬಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.