ನಿಸ್ಶಿನ್/ನಗೋಯಾ, ಅ.03 (DaijiworldNews/AA): ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಮಣಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರೆ, ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಸ್ಟಾರ್ ಕುಸ್ತಿಪಟು ಅಮನ್ ಸೆಹ್ರಾವತ್ ಚಿನ್ನದ ಪದಕ ಗೆದ್ದಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಪಾಕಿಸ್ತಾನದ ವಿರುದ್ಧ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಕಲೆ ಹಾಕಲು ಶಕ್ತವಾಯಿತು. ಈ ಮೂಲಕ ಭಾರತವು ಪಾಕಿಸ್ತಾನವನ್ನು 19 ರನ್ಗಳಿಂದ ಸೋಲಿಸಿತು.
ಬ್ಯಾಟಿಂಗ್ನಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 61 ರನ್ ಗಳಿಸಿದರೆ, ತಿಲಕ್ ವರ್ಮಾ 22 ಎಸೆತಗಳಲ್ಲಿ 51 ರನ್, ಶಿವಂ ದುಬೆ 14 ಎಸೆತಗಳಲ್ಲಿ 27 ರನ್ ಗಳಿಸಿದರು. ಇನ್ನು ಬೈಲಿಂಗ್ನಲ್ಲಿ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ ತಲಾ 2 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದರು.
ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ಉತ್ತರ ಕೊರಿಯಾದ ಸಾಂಗ್ ಹ್ಯಾನ್ ಅವರನ್ನು 11-07 ಅಂತರದಿಂದ ಸೋಲಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಭಾರತ ಇಂದು ಒಟ್ಟು 4 ಚಿನ್ನದ ಪದಕ ಗೆದ್ದಿದ್ದು, ಇದುವರೆಗೆ 20 ಗೋಲ್ಡ್ ಮೆಡಲ್ ಭಾರತದ ಪಾಲಾಗಿದೆ.