ದಾವಣಗೆರೆ, ನ 23 (DaijiworldNews/SM): ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮುಂದಡಿಯಿಟ್ಟಿದೆ. ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯ ಹರಿಹರದ ಅಭಿವೃದ್ಧಿ ಡಬಲ್ ಇಂಜಿನ್ ಸರ್ಕಾರವಿರುವ ಕಾರಣ ಸಾಧ್ಯವಾಗುತ್ತದೆ. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಭಾರತದ ಸಮಗ್ರ ಅಭಿವೃದ್ಧಿಗೆ ಕಟಿಬದ್ಧರಾಗಿದ್ದಾರೆ.
ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುವ 58 ಲಕ್ಷ ರೈತ ಕುಟುಂಬಗಳಿಗೆ 10000 ರೂ.ಗಳನ್ನು ಕೃಷಿ ಸಮ್ಮಾನ ಯೋಜನೆ ಮೂಲಕ ನೀಡಲಾಗುತ್ತಿದೆ. ಮುದ್ರಾ ಯೋಜನೆಯಡಿ ರಾಜ್ಯದ 19 ಲಕ್ಷ ಯುವಕರ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ಸಹಾಯ. ಆಯುಷ್ಮಾನ್ ಭಾರತ ಯೋಜನೆಯಡಿ 1 ಕೋಟಿ ಆರೋಗ್ಯ ಕಾರ್ಡ್ ನೀಡಲಾಗಿದೆ. 10 ಲಕ್ಷ ರೈತರ ಮಕ್ಕಳು ಉತ್ತಮ ಶಿಕ್ಷಣ ಹೊಂದಲು ಅನುಕೂಲವಾಗುವಂತೆ ರೈತ ವಿದ್ಯಾನಿಧಿಯನ್ನು ನೀಡಲಾಗುತ್ತಿದೆ. 6 ಲಕ್ಷ ರೈತಕೂಲಿಕಾರರು, ಮೀನುಗಾರರು, ನೇಕಾರರ , ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ ಎಂದರು.